News

ಲಕ್ಷಾಂತರ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದವರು ಈಗ ಎಲ್ಲಿದ್ದಾರೆ? ಸಾಕ್ಷ್ಯಾಧಾರಗಳೊಂದಿಗೆ ತೋರಿಸಿ – ಬಿಜೆಪಿ ನಾಯಕರಿಗೆ ನಟ ಪ್ರಕಾಶ್ ರಾಜ್ ಬಹಿರಂಗ ಸವಾಲು!

ಮಂಗಳೂರು, 31-10-2026 : ಕರ್ನಾಟಕ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು ಮತ್ತು ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿ ನಾಯಕರಿಗೆ ಹಿರಿಯ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಬಹಿರಂಗ ಸವಾಲು ಹಾಕಿದ್ದಾರೆ. ನಿಜವಾಗಿಯೂ ಲಕ್ಷಾಂತರ ಅಕ್ರಮ ವಲಸಿಗರು ರಾಜ್ಯದಲ್ಲಿದ್ದರೆ ಅವರನ್ನು ಎಲ್ಲಿದ್ದಾರೆಂದು ತೋರಿಸಿ, ಸೂಕ್ತ ದಾಖಲೆಗಳೊಂದಿಗೆ ಸಾಬೀತುಪಡಿಸಿ ಎಂದು ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರ ಹೆಸರಿನಲ್ಲಿ ಜನರಲ್ಲಿ ಭಯ ಮತ್ತು ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಉದ್ದೇಶವಿದೆ ಎಂದು ಹೇಳಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಕೇಳಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಲ್ಲಿಸಿರುವ ಪಟ್ಟಿಯಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮೂಲದ ಕೇವಲ ಇಬ್ಬರು ಮಹಿಳೆಯರ ಹೆಸರುಗಳು ಮಾತ್ರ ಕಂಡುಬಂದಿವೆ ಎಂದು ಪ್ರಕಾಶ್ ರಾಜ್ ತಿಳಿಸಿದರು. ಅವರೂ ವಿವಾಹದ ಮೂಲಕ ಭಾರತಕ್ಕೆ ಬಂದವರಾಗಿದ್ದಾರೆ ಎಂದು ಹೇಳಿದ ಅವರು, ಲಕ್ಷಾಂತರ ಅಕ್ರಮ ವಲಸಿಗರಿದ್ದಾರೆ ಎಂಬ ಆರೋಪಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದರು.

ಕರ್ನಾಟಕದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆತಂಕ ವ್ಯಕ್ತಪಡಿಸಿದ ಪ್ರಕಾಶ್ ರಾಜ್, ಸತ್ತವರು ಮತ್ತು ದ್ವಂದ್ವ ನೋಂದಣಿಗಳನ್ನು ಹೊರತುಪಡಿಸಿದರೂ ಲಕ್ಷಾಂತರ ಜೀವಂತ ಮತದಾರರು ಹೆಸರು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು. ವಿಶೇಷವಾಗಿ ಬೆಂಗಳೂರಿನಲ್ಲಿ ಸುಮಾರು ಶೇ. 50ರಷ್ಟು ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಅಂಕಿಅಂಶಗಳನ್ನು ಉಲ್ಲೇಖಿಸಿ, ನಗರದ ಜನಸಂಖ್ಯೆ ಮತ್ತು ಮತದಾರರ ಸಂಖ್ಯೆಯ ನಡುವಿನ ವ್ಯತ್ಯಾಸದ ಬಗ್ಗೆ ಚುನಾವಣಾ ಆಯೋಗ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪಗಳು, ಮತದಾನದ ಹಕ್ಕು ಕಳೆದುಕೊಳ್ಳುತ್ತಿರುವ ನಾಗರಿಕರ ಸಮಸ್ಯೆಗಳು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಕುರಿತು ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಜನರಲ್ಲಿ ಭಯ ಹುಟ್ಟಿಸುವ ಬದಲು ನೈಜ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದರು. ದೇಶವನ್ನು ಕಟ್ಟುವ ಕೆಲಸದಲ್ಲಿ ಜನರು ತೊಡಗಿಸಿಕೊಳ್ಳಬೇಕು, ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಸೀಮಿತವಾಗದೆ ಜನಪರವಾಗಿ ಮಾತನಾಡುವ ಧ್ವನಿಗಳು ಹೆಚ್ಚಾಗಬೇಕು ಎಂದು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಹಾಗೂ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮನೋಜ್ ವಾಮಂಜೂರು ಉಪಸ್ಥಿತರಿದ್ದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft