ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ದೊಡ್ಡ ಶಾಕ್ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ರಾಜನಾಮೆ ಪತ್ರವನ್ನು ಅಂಗೀಕರಿಸಿದ್ದು, ರಾಜಪಾಲರಿಗೆ ಕಳುಹಿಸಿಕೊಡಲಿದ್ದಾರೆ. ಇನ್ನು ಕೆಎನ್ ರಾಜಣ್ಣ ಅವರ ಮುಂದಿನ ನಡೆ ಏನು? ಎಂಬ ಬಗ್ಗೆ ಕುತೂಹಲ ಹೆಚ್ಚಿದೆ.

ಬೆಂಗಳೂರು: ಕೆಎನ್ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಸೂಚನೆ ಬಂದ ರಾಜಣ್ಣ ಹಿನ್ನೆಲೆ ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಸೋಮವಾರ ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜಣ್ಣ ಅವರು ರಾಜೀನಾಮೆ ಪತ್ರ ನೀಡಿದ್ದಾರೆ. ಆ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜೀನಾಮೆ ಪತ್ರವನ್ನು ಅಂಗೀಕಾರ ಮಾಡಿದ್ದಾರೆ.
ಕೆಲ ದಿನಗಳಿಂದ ಪಕ್ಷ, ಹೈಕಮಾಂಡ್ ಹಾಗೂ ರಾಜಕೀಯ ವಿಷಯಗಳಿಂದ ದೂರ ಇಳಿದಿದ್ದ ಕೆಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ಜತೆಗೆ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಒಳ ಮುನಿಸು ಇತ್ತು. ಹೀಗಾಗಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ
ಇನ್ನು ರಾಜಣ್ಣ ಅವರ ದಿಢೀರ್ ರಾಜೀನಾಮೆ ನಿರ್ಧಾರವು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಹಿರಿಯ ನಾಯಕ, ಗೃಹಸಚಿವರ ಆಪ್ತರ ವಿರುದ್ಧವೇ ಹೈಕಮಾಂಡ್ ಈ ರೀತಿ ಕ್ರಮ ಕೈಗೊಂಡಿರುವುದು ಕೆಲ ಕಾಂಗ್ರೆಸ್ ನಾಯಕರಿಗೆ ಆತಂಕ ಮೂಡಿಸಿದೆ




