
ರಾಂಚಿ, ಆಗಸ್ಟ್ 13: ಝಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಮತ್ತು ಸಿಬ್ಬಂದಿ ಆಯ್ಕೆ ಆಯೋಗದ (JSSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ವಿಧಾನಸೌಧ ಚಲೋ ನಡೆಸಿದ ಸುಮಾರು 600 ಪ್ರತಿಭಟನಾಕಾರರ ವಿರುದ್ಧ ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ನಲ್ಲಿ 100 ಜನರ ಹೆಸರನ್ನು ಉಲ್ಲೇಖಿಸಲಾಗಿದ್ದು, ‘JPSC-JSSC ಸುಧಾರಣಾ ಮಂಚ್’ ಬ್ಯಾನರ್ನಡಿಯಲ್ಲಿ ಧರಣಿ ನಡೆಸುತ್ತಿದ್ದ ಸುಮಾರು 500 ಗುರುತಿಸಲಾಗದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ವಿಧಾನಸೌಧದತ್ತ ಮೆರವಣಿಗೆ ಸಾಗುತ್ತಿದ್ದಾಗ ಪೊಲೀಸರು ಜಲಪಿರಂಗಿ ಮತ್ತು ಅಶ್ರುವಾಯು ಬಳಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ವಿದ್ಯಾರ್ಥಿ ಸಂಘಟನೆಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ವಿಶ್ರಾಂತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಪಟ್ಟು ಹಿಡಿದಿವೆ. ಸುದೀರ್ಘ ದಿನಗಳಿಂದ ನಡೆಯುತ್ತಿರುವ ಈ ಹೋರಾಟದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ನಾಯಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರ ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಈ ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ.
ಈ ಘಟನೆಯು ರಾಜ್ಯದಲ್ಲಿ ದೊಡ್ಡ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಪಕ್ಷ ಬಿಜೆಪಿ ರಾಜ್ಯ ಸರಕಾರದ ದಮನಕಾರಿ ನೀತಿಯನ್ನು ತೀವ್ರವಾಗಿ ಖಂಡಿಸಿದೆ. ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಅವರು ವಿದ್ಯಾರ್ಥಿಗಳ ಬೇಡಿಕೆಗೆ ಬೆಂಬಲ ಸೂಚಿಸಿದ್ದು, ರಾಜ್ಯ ಸರ್ಕಾರವು ಒಂದು ವಾರದೊಳಗೆ ಸಿಬಿಐ ತನಿಖೆಗೆ ಶಿಫಾರಸು ಮಾಡದಿದ್ದರೆ ತಾವು ಸ್ವತಃ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೂಡ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.
ಮತ್ತೊಂದೆಡೆ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮ ಸರ್ಕಾರವು ನೇಮಕಾತಿ ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ಬಗೆಹರಿಸಲು ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಗೊಂದಲಕ್ಕೊಳಗಾದ 14 ನೇ JPSC ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿರುವ ಅವರು, ಪ್ರತಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.



