
ಮಂಗಳೂರು, ಸೆ.30 : ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮಧ್ಯಾಹ್ನ ಸುಮಾರು 12.15ರ ವೇಳೆಗೆ MRPLನ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್ (CHTU)ನಲ್ಲಿ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ.
ಸ್ಫೋಟದ ತೀವ್ರತೆಗೆ ಘಟನಾ ಸ್ಥಳದ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದ್ದು, ಸಮೀಪದ ಪ್ರದೇಶಗಳಲ್ಲೂ ಆತಂಕ ಸೃಷ್ಟಿಯಾಯಿತು. ಘಟನೆಯ ವೇಳೆ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಓರ್ವರಿಗೆ ಗಂಭೀರ ಪ್ರಮಾಣದ ಸುಟ್ಟ ಗಾಯಗಳಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ MRPLನ ತುರ್ತು ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣದ ಕುರಿತು ಪರಿಶೀಲನೆ ಮುಂದುವರಿದಿದೆ.
ಘಟನೆಯ ಹಿನ್ನೆಲೆಯಲ್ಲಿ MRPL ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸ್ಫೋಟದ ಕುರಿತು MRPL ಆಡಳಿತ ಮಂಡಳಿಯಿಂದ ಹೆಚ್ಚಿನ ಪರಿಶೀಲಿತ ಮಾಹಿತಿ ನಿರೀಕ್ಷಿಸಲಾಗಿದ್ದು, ಘಟನೆಯ ಸಂಪೂರ್ಣ ವಿವರಗಳು ತನಿಖೆಯ ಬಳಿಕ ಸ್ಪಷ್ಟವಾಗುವ ಸಾಧ್ಯತೆಯಿದೆ.



